ಕರುನಾಡು ಘರ್ಜುನೆ ಸುದ್ದಿ ರೋಣ: ಗದಗ ಜಿಲ್ಲೆಯ ರೋಣ ತಾಲೂಕಿನ ಗಜೇಂದ್ರಗಡ ರಸ್ತೆಯ ಕೆಇಬಿ ಗ್ರಿಡ್ ಸಮೀಪ ಬುಧವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರೋಣದಿಂದ ಯಲಬುರ್ಗಿ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಗಜೇಂದ್ರಗಡದಿಂದ ರೋಣದತ್ತ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಇಬ್ರಾಹಿಂಸಾಬ್ ಗೋನಾಳ (74) ಹಾಗೂ ಆಸಿಫ್ ನದಾಫ್ (32) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಹುಸೇನ್ಸಾಬ್ ಇಬ್ರಾಹಿಂಸಾಬ್ ಗೋನಾಳ ಅವರನ್ನು ತಕ್ಷಣ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ತಂದೆ, ಮಗ ಹಾಗೂ ಅವರ ಸಹೋದ್ಯೋಗಿ ಸೇರಿ ಮೂವರು ಒಂದೇ ಬೈಕ್‌ನಲ್ಲಿ ತಮ್ಮ ಸೊಸೆಯನ್ನು ಕರೆತರಲು ತೆರಳುತ್ತಿದ್ದ ವೇಳೆ, ಎದುರಿನಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ.
ಈ ದುರ್ಘಟನೆಯಿಂದ ಮೃತರ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ರೋಣ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.