ಕರುನಾಡು ಘರ್ಜನೆ ಸುದ್ದಿ ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ದೇವೇಂದ್ರ ಫಡ್ನವಿಸ್ ಮತ್ತೊಮ್ಮೆ ಸಿಎಂ ಪಟ್ಟಕ್ಕೆ ಏರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದ ಈ ಅದ್ಧೂರಿ ಸಮಾರಂಭದಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿದರು. ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ದೇವೇಂದ್ರ ಫಡ್ನವಿಸ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಮೂರನೇ ಬಾರಿಗೆ ಸಿಎಂ ಸ್ಥಾನ ಅಲಂಕರಿಸಿದ ದೇವೇಂದ್ರ ಫಡ್ನವೀಸ್ ಇಬ್ಬರು ಉಪಮುಖ್ಯಮಂತ್ರಿಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು. ಎನ್ಸಿಪಿ ನಾಯಕ ಅಜಿತ್ ಪವಾರ್ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಇಂದು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.ಇದಕ್ಕೂ ಮುನ್ನ, ಗುರುವಾರ ಪ್ರಮಾಣ ವಚನ ಸ್ವೀಕರಿಸುವುದಾಗಿ ಅಜಿತ್ ಪವಾರ್ ಹೇಳಿದ್ದರೆ, ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ಪಾಳಯದಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿರಲಿಲ್ಲ. ಹೀಗಾಗಿ, ಮಹಾರಾಷ್ಟ್ರ ಸರ್ಕಾರದಲ್ಲಿ ಏಕನಾಥ್ ಶಿಂಧೆ ಪಾತ್ರವೇನು? ಎಂಬ ಬಗ್ಗೆ ಕುತೂಹಲ ಉಳಿದಿತ್ತು.