ಕರುನಾಡು ಘರ್ಜುನೆ ಸುದ್ದಿ ಗದುಗ: ಮೇ ೧೮ ರಂದು ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಗದುಗಿನ ಗಂಗಿಮಡಿ ಪ್ರದೇಶದಲ್ಲಿ ಅನೇಕ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಏಕಾಏಕಿ ಸುರಿದ ಮಳೆಯಿಂದ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದು, ರಾತ್ರಿ ವೇಳೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಹಲವು ಕುಟುಂಬಗಳು ತಮ್ಮ ಅವಶ್ಯಕ ವಸ್ತುಗಳನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಟ್ಟರು.
ವಿಷಯ ತಿಳಿಯುತ್ತಿದ್ದಂತೆಯೇ ಮಾನ್ಯ ಜಿಲ್ಲಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಅಗತ್ಯ ನೆರವು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂತ್ರಸ್ತರು ಹಸಿವಿನಿಂದ ಬಳಲಬಾರದೆಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳೇ ಸಾರ್ವಜನಿಕರಿಗೆ ರಾತ್ರಿ ಊಟದ ವ್ಯವಸ್ಥೆ ಮಾಡಿಸಿ ಮಾನವೀಯತೆ ಮೆರೆದರು. ವಿಶೇಷವೆಂದರೆ ಅವರು ಸ್ವತಃ ಸಾರ್ವಜನಿಕರೊಂದಿಗೆ ಕುಳಿತು ಊಟ ಮಾಡಿ ಧೈರ್ಯ ತುಂಬಿದರು. ಜಿಲ್ಲಾಧಿಕಾರಿಗಳ ಈ ಸರಳತೆ ಹಾಗೂ ಮಾನವೀಯ ನಡೆ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಯಿತು.
ಈ ಸಂದರ್ಭದಲ್ಲಿ ಎಸಿ ಗಂಗಪ್ಪ ಎಂ, ತಹಶಿಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಪೌರಾಯುಕ್ತ ರಾಜಾರಾಮ್ ಪವಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು, ಪರಿಹಾರ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು.
ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ತಕ್ಷಣ ಸ್ಪಂದಿಸಿ ನೆರವಿನ ಹಸ್ತ ಚಾಚಿದ ಜಿಲ್ಲಾಡಳಿತದ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.