ಕರುನಾಡು ಘರ್ಜುನೆ ಸುದ್ದಿ ಗದಗ, ಜೂ. 22: ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಯಾವುದೇ ಕ್ರಮಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗದಗ ಜಿಲ್ಲಾ ಘಟಕದ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲು ರೈತರು ಹಾಗೂ ಸಾರ್ವಜನಿಕರು ಸಜ್ಜಾಗಿದ್ದಾರೆ.
ಇಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರೈತರು ಸೇರಲಿದ್ದು, 11 ಗಂಟೆಗೆ ಬೃಹತ್ ಪ್ರತಿಭಟನೆ ಆರಂಭವಾಗಲಿದೆ. ವಿದ್ಯುತ್ ವಿತರಣೆಯನ್ನು ಖಾಸಗಿ ಕಂಪನಿಗಳಿಗೆ, ವಿಶೇಷವಾಗಿ ಟಾಟಾ ಪವರ್ ಕಂಪನಿಗೆ ವಹಿಸಿದರೆ ರೈತರಿಗೆ ನೀಡಲಾಗುತ್ತಿರುವ ಉಚಿತ ವಿದ್ಯುತ್ ಯೋಜನೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.
ಖಾಸಗೀಕರಣದ ಬಳಿಕ ಕೃಷಿ ಪಂಪ್‌ಸೆಟ್‌ಗಳಿಗೆ ಯೂನಿಟ್‌ಗೆ ₹8 ರಿಂದ ₹12 ರವರೆಗೆ ಶುಲ್ಕ ವಿಧಿಸುವ ಸಾಧ್ಯತೆ ಇದ್ದು, ಸರ್ಕಾರಿ ಸಬ್ಸಿಡಿ ಕಡಿತವಾಗಬಹುದು. ಗ್ರಾಮೀಣ ಪ್ರದೇಶಗಳಿಗೆ ನೀಡಲಾಗುತ್ತಿರುವ ಆದ್ಯತೆ ಕಡಿಮೆಯಾಗುವ ಹಾಗೂ ಬಿಲ್ ಪಾವತಿಯಲ್ಲಿ ವಿಳಂಬವಾದರೆ ತಕ್ಷಣ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ರೈತ ಸಂಘ ಎಚ್ಚರಿಸಿದೆ.
ಸಣ್ಣ ಮತ್ತು ಅತಿಸಣ್ಣ ರೈತರು ಇದರಿಂದ ಹೆಚ್ಚು ಸಂಕಷ್ಟಕ್ಕೆ ಸಿಲುಕಲಿದ್ದು, ಮೀಟರ್ ಹಾಗೂ ಟ್ರಾನ್ಸ್‌ಫಾರ್ಮರ್ ದುರಸ್ತಿ ವೆಚ್ಚವನ್ನೂ ರೈತರೇ ಭರಿಸಬೇಕಾಗುವ ಪರಿಸ್ಥಿತಿ ಉಂಟಾಗಬಹುದು ಎಂದು ಸಂಘದ ಮುಖಂಡರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಟಾಟಾ ಪವರ್‌ಗೆ ಲೈಸೆನ್ಸ್ ನೀಡಬಾರದು, ರೈತರಿಗೆ ನೀಡಲಾಗುತ್ತಿರುವ ಉಚಿತ ವಿದ್ಯುತ್ ಯೋಜನೆಯನ್ನು ಮುಂದುವರಿಸಬೇಕು ಹಾಗೂ ವಿದ್ಯುತ್ ಕ್ಷೇತ್ರ ಸರ್ಕಾರದ ಅಧೀನದಲ್ಲೇ ಉಳಿಯಬೇಕು ಎಂಬ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುತ್ತಿದೆ.
ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರೈತರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಕರೆ ನೀಡಿದೆ. “ಖಾಸಗೀಕರಣ ತೊಲಗಿಸಿ, ರೈತರನ್ನು ಉಳಿಸಿ”, “ಭೂಮಿ ನಮ್ಮದು, ನೀರು ನಮ್ಮದು, ವಿದ್ಯುತ್ ಕೂಡ ನಮ್ಮದೇ” ಎಂಬ ಘೋಷಣೆಗಳೊಂದಿಗೆ ಸರ್ಕಾರದ ಗಮನ ಸೆಳೆಯಲು ರೈತರು ಸಜ್ಜಾಗಿದ್ದಾರೆ.
ವಿದ್ಯುತ್ ಖಾಸಗೀಕರಣದ ವಿರುದ್ಧ ಗದಗ ಜಿಲ್ಲೆಯಲ್ಲಿ ನಡೆಯಲಿರುವ ಈ ಹೋರಾಟಕ್ಕೆ ರೈತರು ಹಾಗೂ ಜನಸಾಮಾನ್ಯರಿಂದ ಭಾರೀ ಬೆಂಬಲ ವ್ಯಕ್ತವಾಗುವ ನಿರೀಕ್ಷೆ ಇದೆ.